ಬಂಟ್ವಾಳ : ಯಾವುದೇ ಸರಕಾರಿ ಶಾಲೆಗಳ ಅಭಿವೃದ್ಧಿಗೆ ಆ ಶಾಲೆಯ ಹಳೆವಿದ್ಯಾರ್ಥಿಗಳ ಸಹಕಾರ ಅಗತ್ಯ. ಹಳೆ ವಿದ್ಯಾರ್ಥಿಗಳು ತಾನು ಕಲಿತ ಸರಕಾರಿ ಶಾಲೆಯನ್ನು ನೆನಪು ಮಾಡಿ ಅದರ ಅಭಿವೃದ್ಧಿಗೆ ಸಹಕಾರ ನೀಡಬೇಕು. ಸರಕಾರಿ ಶಾಲೆಯಲ್ಲಿ ಶಿಕ್ಷಣದ ಗುಣಮಟ್ಟದಲ್ಲಿ ಯಾವುದೇ ಕಡಿಮೆ ಇಲ್ಲ. ಇಲ್ಲಿನ ಶಿಕ್ಷಣವು ಖಾಸಗಿ ಶಾಲೆಯನ್ನು ಮೀರಿಸುವಂತಿರುತ್ತದೆ. ಶಿಕ್ಷಕರು ಮಕ್ಕಳಿಗೆ ಆತ್ಮವಿಶ್ವಾಸ ಹೆಚ್ಚು ಮಾಡಬೇಕು ಎಂದು ಬಂಟ್ವಾಳ ವಿಧಾನ ಸಭಾಕ್ಷೇತ್ರದ ಶಾಸಕ ರಾಜೇಶ್ ನಾಯ್ಕ್ ತಿಳಿಸಿದರು.

ಅವರು ಬಿ.ಸಿ.ರೋಡಿನ ಹೊಟೇಲ್ ರಂಗೋಲಿಯಲ್ಲಿ ಮಂಗಳವಾರ ನಡೆದ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ದ.ಕ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ‘ನಾ ಕಲಿತ ಶಾಲೆಯ ತೀರಿಸುವೆ ಋಣವ – ಇದು ನನ್ನ ಜವಾಬ್ದಾರಿ’ ಸರಕಾರಿ ಶಾಲೆಯ ಹಳೆ ವಿದ್ಯಾರ್ಥಿಗಳ ಪದಾಧಿಕಾರಿಗಳಿಗೆ ನೀಡುವ ಕಾರ್ಯಾಗಾರವನ್ನು ಉದ್ಘಾಟಿಸಿ ಸಭಾಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಇಂತಹ ಕಾರ್ಯಕ್ರಮಗಳು ಪ್ರತೀ ಶಾಲೆಯಲ್ಲಿ ನಡೆಯಬೇಕು. ಪ್ರತೀ ಶಾಲೆಯ ವಾರ್ಷಿಕೋತ್ಸವಕ್ಕೆ ಅದೇ ಶಾಲೆಯಲ್ಲಿ ಕಲಿತ ವಿದ್ಯಾರ್ಥಿಗಳು ವಿವಿಧ ರೀತಿಯಲ್ಲಿ ಸಾಧನೆ ಮಾಡಿದ ವ್ಯಕ್ತಿಗಳನ್ನು ಗುರುತಿಸಬೇಕು. ಯಾವುದೇ ಶಾಲೆಗೆ ಶಾಸಕರಿಗಿಂತ ಅಲ್ಲಿಯ ಹಳೆ ವಿದ್ಯಾರ್ಥಿಗಳು ಹಾಗೂ ಆ ಊರಿನ ಗ್ರಾಮಸ್ಥರು ಶಾಲೆಯ ಬೆನ್ನೆಲುಬು ಎಂದು ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶಿವರಾಮ ಅಯ್ಯ ಮಾತನಾಡಿ ಹಳೆ ವಿದ್ಯಾರ್ಥಿಗಳು ಸ್ವಯಂಪ್ರೇರಿತರಾಗಿ ತಾನು ಕಲಿತ ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಬೇಕು. ಸರಕಾರದಿಂದ ಸಿಗುವ ಅನೇಕ ಅನುದಾನವನ್ನು ಹಳೆ ವಿದ್ಯಾರ್ಥಿಗಳ ಸಹಕಾರದೊಂದಿಗೆ ಮಾಡಿದರೆ ಆಗ ಶಾಲಾ ಅಭಿವೃದ್ಧಿ ಹಾಗೂ ಪ್ರತೀ ಶಾಲೆಯು ಉತ್ತಮ ರೀತಿಯಲ್ಲಿರಲು ಸಾಧ್ಯ ಎಂದು ತಿಳಿಸಿದರು.
ವೇದಿಕೆಯಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾದ್ಯಕ್ಷ ಅಬ್ಬಾಸ್‌ಅಲಿ, ಬಂಟ್ವಾಳ ಸಾಮಾಜಿಕ ಸ್ಥಾಯಿ ಸಮಿತಿ ಅಧ್ಯಕ್ಷೆ ಧನಲಕ್ಷ್ಮೀ ಬಂಗೇರ, ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಅಧಿಕಾರಿ ರಾಧಾಕೃಷ್ಣ ಭಟ್, ಮೂಡಬಿದ್ರೆ ಕ್ಷೇತ್ರ ಶಿಕ್ಷಣಾಧಿಕಾರಿ ಆಶಾ, ತರಬೇತುದಾರ ಉಮೇಶ್ ನಿರ್ಮಲ್ ಉಪಸ್ಥಿತರಿದ್ದರು. ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್ ಸ್ವಾಗತಿಸಿದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್ ಧನ್ಯವಾದ ನಿಡಿದರು. ಬಂಟ್ವಾಳ ಶಿಕ್ಷಣ ಇಲಾಖೆಯ  ಸುಶೀಲಾ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here