ವಿದ್ಯಾರ್ಥಿಗಳು ಜೀವನದ ಪ್ರತೀ ಸಂದರ್ಭದಲ್ಲಿಯೂ ತಂದೆತಾಯಿ ಗುರುಹಿರಿಯರಲ್ಲಿ ಗೌರವ ತೋರಬೇಕು. ತಂದೆತಾಯಿಗಳೂ ಸಹ ಮಕ್ಕಳಲ್ಲಿ ದೇವರ ಭಕ್ತಿ, ನಂಬಿಕೆಯನ್ನು ಉದ್ದೀಪಿಸುವಂತೆ ಪ್ರೇರೇಪಿಸಬೇಕು. ಉತ್ತಮ ಜೀವನಕ್ಕೆ ಅಡಿಪಾಯವಾಗುವಂತಹ ಸದ್ವಿಚಾರಗಳನ್ನು ಮೈಮನಕ್ಕೆ ತುಂಬಿಸಬೇಕು ಎಂದು ಮಾಣಿಲ ಶ್ರೀಧಾಮ ಶ್ರೀಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ನುಡಿದರು.
ಅವರು ಭಾನುವಾರ ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ನಡೆಯುತ್ತಿರುವ ಒಂದು ಮಂಡಲ ಸಾಮೂಹಿಕ ಶ್ರೀ ಲಕ್ಷ್ಮೀ ಪೂಜೆಯ ಬಳಿಕ ನಡೆದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.
ಮುಖ್ಯ ಅತಿಥಿಗಳಾಗಿ ಶ್ರೀನಿವಾಸ ಪುಂಡಲೀಕ ಶೇಟ್, ಸದಾನಂದ ಪುಂಡಲೀಕ ಶೇಟ್, ಬೆಂಗಳೂರಿನ ಉದ್ಯಮಿ ದೇವದಾಸ್ ಭಾಗವಹಿಸಿದ್ದರು.
ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ವನಿತಾ ವಿ.ಶೆಟ್ಟಿ, ಸ್ವಾಗತಿಸಿದರು. ಸದಸ್ಯೆ ವಸಂತಿ ಶೆಟ್ಟಿ ವಂದಿಸಿದರು. ಶ್ರೀ ಮಹಾಲಕ್ಷ್ಮೀ ಮಹಿಳಾ ಸೇವಾ ಸಮಿತಿ ಕಾರ್‍ಯದರ್ಶಿ ಗೀತಾ ಕಾರ್‍ಯಕ್ರಮ ನಿರೂಪಿಸಿದರು.
ಶ್ರೀ ಕ್ಷೇತ್ರದಲ್ಲಿ ಬೆಳಗ್ಗೆ ಗಣಪತಿ ಹವನ, ಪಂಚಾಮೃತ ಅಭಿಷೇಕ, ಕಲ್ಪೋಕ್ತ ಲಕ್ಷ್ಮೀ ಪೂಜೆ, ಶ್ರೀಗುರುಪೂಜೆ, ಬಾಲಭೋಜನ, ನಾಗದೇವರಿಗೆ ಕ್ಷೀರಾಭಿಷೇಕ, ಗೋಮಾತಾ ಪೂಜೆ, ಕನಕಧಾರಾ ಯಾಗ, ಸಾಮೂಹಿಕ ಕುಂಕುಮಾರ್ಚನೆ, ಪೂರ್ಣಾಹುತಿ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು. ಸಂಜೆ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ, ಶ್ರೀದುರ್ಗಾ ಪೂಜೆ, ಆಶ್ಲೇಷ ಬಲಿ, ಶ್ರೀ ವಿಠೋಭರುಕ್ಮಿಣಿ ಧ್ಯಾನ ಮಂದಿರದಲ್ಲಿ ಭಜನಾ ಸಂಕೀರ್ತನೆ, ಶ್ರೀಲಕ್ಷ್ಮೀ ಪೂಜೆ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಿತು.

 

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here