ಮಂಗಳೂರು: ಆಗಸ್ಟ್ 5ರಂದು ಹಲವು ವರ್ಷಗಳ ಕನಸಾಗಿರುವ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ಭೂಮಿ ಪೂಜೆ ಕಾರ್ಯ ನಡೆಯಲಿದೆ. ಆ ದಿನದಂದು ಮುನ್ನೆಚ್ಚರಿಕಾ ಕ್ರಮವಾಗಿ ಮಂಗಳೂರು ಪೊಲೀಸ್ ಆಯುಕ್ತರ ವ್ಯಾಪ್ತಿಯಲ್ಲಿ ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಆಯುಕ್ತ ವಿಕಾಶ್ ಕುಮಾರ್ ವಿಕಾಶ್ ಅವರು ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ನಡೆಯುವ ಸಂದರ್ಭದಲ್ಲಿ ನಗರದಲ್ಲಿ ಹಿಂದೂ ಪರ ಸಂಘಟನೆಗಳು ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಬಗ್ಗೆ ಇಲಾಖೆಗೆ ಮಾಹಿತಿ ಲಭಿಸಿದೆ. ಇದೇ ವೇಳೆ ಕೆಲವರು ಪ್ರತಿಭಟನೆ ನಡೆಸಲು ಸಿದ್ಧತೆ ನಡೆಸುತ್ತಿದ್ದಾರೆ ಎಂಬ ವಿಚಾರವೂ ಪೊಲೀಸ್ ಇಲಾಖೆಗೆ ಸಿಕ್ಕಿದೆ. ಈ ಹಿನ್ನೆಲೆ ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸೆಕ್ಷನ್ 144ರಡಿಯಲ್ಲಿ ನಿಷೇಧಾಜ್ಞೆ ಜಾರಿಗೆ ತರಲಾಗಿದೆ.
ಆಗಸ್ಟ್ 4ರ ರಾತ್ರಿ 8 ಗಂಟೆಯಿಂದ ಆಗಸ್ಟ್ 6ರ ಬೆಳಿಗ್ಗೆ 6 ಗಂಟೆಯ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಪೊಲೀಸ್ ಆಯುಕ್ತರು ಮಾಹಿತಿ ನೀಡಿದ್ದಾರೆ.
ಮಂಗಳೂರಿನಲ್ಲಿ ಈ ಹಿಂದೆ ಸಣ್ಣಪುಟ್ಟ ವಿಚಾರಗಳಲ್ಲಿ ಆರಂಭಗೊಂಡ ಕೆಲವು ಘರ್ಷನೆಗಳು ಗಲಭೆಯಾಗಿ ಪರಿವರ್ತನೆಗೊಂಡಿರುವ ಪ್ರಸಂಗಗಳು ಹಲವಾರು ಇವೆ. ಅಲ್ಲದೆ, 1992ರಿಂದ ಈಚೇಗೆ ಹಲವಾರು ಗಲಭೆಗಳು ನಡೆದಿವೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯನ್ನು ವಹಿಸಲಾಗಿದೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here