


ಮಂಗಳೂರು: ದ.ಕ. ಜಿಲ್ಲೆಯಲ್ಲಿ ಸಾರ್ವಜನಿಕ ಗಣೇಶೋತ್ಸವ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಎಚ್ಚರಿಕೆ ನೀಡಿದ್ದಾರೆ.
ಸಾರ್ವಜನಿಕ ಗಣೇಶೋತ್ಸವದ ಬಗ್ಗೆ
ಮಾರ್ಗಸೂಚಿ ಬಿಡುಗಡೆ ಮಾಡಿದ ಜಿಲ್ಲಾಧಿಕಾರಿ, ಈ ವರ್ಷ ಕೊರೊನಾ ಕಾರಣದಿಂದಾಗಿ ಗಣೇಶ ಚತುರ್ಥಿ ಹಬ್ಬವನ್ನು ಸರಳ ರೀತಿಯಲ್ಲಿ ದೇವಸ್ಥಾನದ ಒಳಗೆ ಅಥವಾ ತಮ್ಮ ಮನೆಯಲ್ಲಿಯೇ ಆಚರಿಸಬೇಕು ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಸ್ಥಳದಲ್ಲಿ ಗಣೇಶನ ಮೂರ್ತಿ ಪ್ರತಿಷ್ಟಾಪಿಸಲು ಅವಕಾಶವಿಲ್ಲ. ಹಾಗೆಯೇ ಸಾರ್ವಜನಿಕ ನದಿ, ಕೆರೆ, ಬಾವಿ, ಕೊಳ ಹಾಗೂ ಕಲ್ಯಾಣಿಗಳಲ್ಲಿ ಗಣೇಶ ಮೂರ್ತಿಯನ್ನು ವಿಸರ್ಜನೆ ಮಾಡುವಂತಿಲ್ಲ. ಇನ್ನು ಮೂರ್ತಿ ವಿಸರ್ಜನೆ ಸಂದರ್ಭದಲ್ಲಿ ಮೆರವಣಿಗೆ ಮಾಡುವಂತಿಲ್ಲ. ಹಾಗೆಯೇ ಮನೆಯಲ್ಲಿ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಗಳನ್ನು ಅವರ ಮನೆ ಆವರಣದಲ್ಲಿಯೇ ವಿಸರ್ಜನೆ ಮಾಡಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ.
ಗಣೇಶೋತ್ಸವ ಆಚರಣೆ ಮಾಡುವ ಎಲ್ಲಾ ದೇವಾಲಯಗಳನ್ನು ಪ್ರತಿದಿನ ಸ್ಯಾನಿಟೈಸ್ ಮಾಡಬೇಕು. ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿ ಥರ್ಮಲ್ ಸ್ಕ್ರೀನಿಂಗ್ ಮಾಡಿ ಸ್ಯಾನಿಟೈಝರ್ ಕಡ್ಡಾಯವಾಗಿ ಬಳಸಬೇಕು. ಹಾಗೆಯೇ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಜಿಲ್ಲಾಡಳಿತ ಸೂಚಿಸಿದೆ. ಯಾವುದೇ ಮಾರ್ಗಸೂಚಿಯ ಉಲ್ಲಂಘನೆಯಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.





