ಬಂಟ್ವಾಳ: ದೇಶದ ಸ್ವಾತಂತ್ರ್ಯ ಹೋರಾಟ ಕಾಲದಿಂದಲೂ ಮಾಧ್ಯಮದ ಕೊಡುಗೆ ವಿಶೇಷವಾಗಿದ್ದು, ಅಂದಿನ ಕಾಲಘಟ್ಟದಲ್ಲಿ ದೇಶಾಭಿಮಾನದ ಕಿಚ್ಚು ಹಚ್ಚಿದ ಕೀರ್ತಿ ಮಾಧ್ಯಮಕ್ಕೆ ಸಲ್ಲುತ್ತದೆ. ಸ್ಪರ್ಧಾತ್ಮಕ ಪರೀಕ್ಷೆಯ ಸಿದ್ಧತೆಗೆ ಅಭ್ಯರ್ಥಿಗಳಿಗೆ ಮಾಧ್ಯಮದ ಕೊಡುಗೆ ಅಪಾರ ಎಂದು ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್. ಹೇಳಿದರು.
ಅವರು ಬಂಟ್ವಾಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಗುರುವಾರ ತುಂಬೆ ಪ.ಪೂ.ಕಾಲೇಜಿನಲ್ಲಿ ನಡೆದ ಪತ್ರಿಕಾ ದಿನಾಚರಣೆಯನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿದರು.
ಪ್ರಸ್ತುತ ದಿನಗಳಲ್ಲಿ ಪರಿಸರದ ಕುರಿತು ಜಾಗೃತಿ ಮೂಡಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಈ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಪ್ರಯತ್ನಿಸುವುದು ಅಗತ್ಯ. ವಿದ್ಯಾರ್ಥಿಗಳು ಜೀವನದಲ್ಲಿ ಎಂದಿಗೂ ಪೋಕಸ್ ಕಳೆದುಕೊಳ್ಳಬಾರದು. ನಿಮ್ಮ ಆಸಕ್ತಿ ಕ್ಷೇತ್ರದಲ್ಲಿ ಮುಂದುವರಿದರೆ ಯಶಸ್ಸು ಖಂಡಿತ. ಬಂಟ್ವಾಳ ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಕಂದಾಯ ಇಲಾಖೆ, ಪೊಲೀಸ್ ಇಲಾಖೆ, ಪತ್ರಕರ್ತರು ಹೀಗೆ ಎಲ್ಲರೂ ಜೊತೆಯಾಗಿ ಕಾರ್ಯನಿರ್ವಹಿಸೋಣ ಎಂದರು.
ಅಧ್ಯಕ್ಷತೆ ವಹಿಸಿದ್ದ ತುಂಬೆ ಪ.ಪೂ.ಕಾಲೇಜಿನ ಪ್ರಾಂಶುಪಾಲ ಕೆ.ಎನ್.ಗಂಗಾಧರ ಆಳ್ವ ಮಾತನಾಡಿ, ದೇಶದ ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠವಾಗಿ ಉಳಿಯಲು ಮಾಧ್ಯಮ ಕ್ಷೇತ್ರದ ಕೊಡುಗೆ ವಿಶೇಷವಾಗಿದ್ದು, ಹಲವು ಸವಾಲುಗಳ ಮಧ್ಯೆ ಕೆಲಸ ನಿರ್ವಹಿಸುವ ಅನಿವಾರ್ಯತೆ ಪತ್ರಕರ್ತರ ಮುಂದಿದೆ. ಸಮಾಜವನ್ನು ಬಡಿದೆಬ್ಬಿಸುವ ಕಾರ್ಯ ಮಾಡಿದಾಗ ಅದರಿಂದ ಗೌರವವೂ ಹೆಚ್ಚಾಗುತ್ತದೆ ಎಂದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಹಾಗೂ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಅವರು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಪ.ಗೋ.ಪ್ರಶಸ್ತಿ ವಿಜೇತ ಪತ್ರಕರ್ತ ಇಮ್ತಿಯಾಜ್ ಶಾ ತುಂಬೆ ಅವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಜಿಲ್ಲಾ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಭಾಸ್ಕರ್ ರೈ ಕಟ್ಟ, ತಾಲೂಕು ಸಂಘದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ಅಲಿ ವಿಟ್ಲ ಉಪಸ್ಥಿತರಿದ್ದರು. ರತ್ನದೇವ್ ಪುಂಜಾಲಕಟ್ಟೆ ಸನ್ಮಾನ ಪತ್ರ ವಾಚಿಸಿದರು.
ತಾಲೂಕು ಸಂಘದ ಅಧ್ಯಕ್ಷ ಹರೀಶ್ ಮಾಂಬಾಡಿ ಸ್ವಾಗತಿಸಿ, ಪ್ರಸ್ತಾವಿಸಿದರು. ಉಪನ್ಯಾಸಕ ವಿ.ಸುಬ್ರಹ್ಮಣ್ಯ ಭಟ್ ವಂದಿಸಿದರು. ಉದಯಶಂಕರ್ ನೀರ್ಪಾಜೆ ಕಾರ್ಯಕ್ರಮ ನಿರ್ವಹಿಸಿದರು.


