ಬಂಟ್ವಾಳ: ಹೆರಿಗೆಗಾಗಿ ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದ ಮಹಿಳೆಯೊಬ್ಬರು ಹೆರಿಗೆಯ ವೇಳೆ ಮೃತಪಟ್ಟ ಧಾರುಣ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಬಂಟ್ವಾಳ ಅಜೆಕಳ ನಿವಾಸಿ ಉದಯಕುಮಾರ್ ಅವರ ಪತ್ನಿ ಉಷಾ(೩೨) ಮೃತ ದುಧೈವಿ. ಹೆರಿಗೆಯ ದಿನಾಂಕ ಸಮೀಪಿಸಿದ ಹಿನ್ನೆಲೆಯಲ್ಲಿ ವೈದ್ಯರ ಸಲಹೆಯಂತೆ ಅವರ ೨ನೇ ಹೆರಿಗೆಗಾಗಿ ನ. ೨ರಂದು ಬಿ.ಸಿ.ರೋಡಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿತ್ತು. ಸಂಜೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಹೆರಿಗೆಯ ವೇಳೆ ಅವರು ಮಗುವಿಗೆ ಜನ್ಮ ನೀಡಿದ್ದು, ಬಳಿಕ ರಾತ್ರಿ ವೈದ್ಯರು ಅವರಿಗೆ ತುರ್ತು ಚಿಕಿತ್ಸೆ ಅಗತ್ಯವಿದೆ ಎಂದು ಮಂಗಳೂರಿಗೆ ಕರೆದುಕೊಂಡು ಹೋಗುವಂತೆ ಸಲಹೆ ನೀಡಿದರು.
ಆದರೆ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯನ್ನು ಪರೀಕ್ಷಿಸಿದ ವೈದ್ಯರು ಮಹಿಳೆ ಮೃತಪಟ್ಟಿರುವ ಕುರಿತು ತಿಳಿಸಿದರು. ಹೀಗಾಗಿ ಮೃತ ಉಷಾ ಅವರ ಕುಟುಂಬ ಸಾವಿನ ಕಾರಣದ ಕುರಿತ ತನಿಖೆಗೆ ಪೊಲೀಸ್ ಇಲಾಖೆಯನ್ನು ಆಗ್ರಹಿಸಿದೆ. ಪ್ರಸ್ತುತ ಮಗು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆರೋಗ್ಯವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಹಿಳೆಯ ಸಾವಿನ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದೆ. ರವಿವಾರ ಮರಣೋತ್ತರ ಪರೀಕ್ಷೆ ನಡೆದಿದ್ದು, ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.