ಬೆಂಗಳೂರು: ಇಂದು ಸಿಎಂ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ನೂತನ 10 ಸಚಿವರು ಸೇರ್ಪಡೆಯಾಗಿದ್ದಾರೆ. ಇಂದು ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಪದಗ್ರಹಣ ಕಾರ್ಯಕ್ರಮದಲ್ಲಿ 10 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ವಜುಭಾಯಿ ವಾಲಾ 10 ನೂತನ ಸಚಿವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಮುಖ್ಯಂತ್ರಿ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಲವಾರು ಸಚಿವರು, ಶಾಸಕರು ಭಾಗವಹಿಸಿದ್ದರು. ಆದರೆ ಬಿಜೆಪಿಯ ಕೆಲ ಸಚಿವರು ಶಾಸಕರು ಕಾರ್ಯಕ್ರಮಕ್ಕೆ ಆಗಮಿಸಿಲ್ಲ. ಡಿಸಿಎಂ ಸ್ಥಾನದ ಆಕಾಂಕ್ಷಿಗಳಾದ ಸಚಿವರಾದ ಶ್ರೀರಾಮುಲು, ಹಾಗೂ ಕೆ. ಎಸ್. ಈಶ್ವರಪ್ಪ ಕೂಡಾ ಇಂದಿನ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಸಚಿವ ಸ್ಥಾನದ ಆಕಾಂಕ್ಷಿಗಳಾದ ಉಮೇಶ್ ಕತ್ತಿ, ಸಿ.ಪಿ ಯೋಗೇಶ್ವರ್, ಹಾಗೂ ಎಂ. ಟಿ. ಬಿ. ನಾಗರಾಜ್ ಪ್ರಮಾಣವಚನ ಕಾರ್ಯಕ್ರಮಕ್ಕೆ ಹಾಜರಾಗಲಿಲ್ಲ.

ಉಪಚುನಾವಣೆಯಲ್ಲಿ ಸೋಲನುಭವಿಸಿದ್ದ ಎಚ್.ವಿಶ್ವನಾಥ್ ಮತ್ತು ಮಾಜಿ ಸಚಿವ ಆರ್. ಶಂಕರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ನೂತನ ಸಚಿವರಿಗೆ ಶುಭ ಹಾರೈಸಿದರು.
ಗೋಕಾಕ್ ಶಾಸಕ ರಮೇಶ್‌ ಜಾರಕಿಹೊಳಿ, ವಿಜಯನಗರ ಶಾಸಕ ಆನಂದ್‌ ಸಿಂಗ್‌, ಕಾಗವಾಡ ಶಾಸಕ ಶ್ರೀಮಂತ ಪಾಟೀಲ್‌, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್‌, ಹಿರೇಕೆರೂರು ಶಾಸಕ ಬಿ.ಸಿ.ಪಾಟೀಲ್‌, ಯಶವಂತಪುರ ಶಾಸಕ ಎಸ್‌.ಟಿ. ಸೋಮಶೇಖರ್‌, ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜು, ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ. ಗೋಪಾಲಯ್ಯ, ಚಿಕ್ಕಬಳ್ಳಾಪುರ ಶಾಸಕ ಡಾ| ಕೆ. ಸುಧಾಕರ್‌, ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಅವರು ಬಿಎಸ್ ವೈ ಸಂಪುಟದ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ ಅಥಣಿ ಶಾಸಕ ಮಹೇಶ್ ಕುಮಟಳ್ಳಿಯವರನ್ನು ಈ ಪಟ್ಟಿಯಿಂದ ಕೈಬಿಡಲಾಗಿದೆ.

ಎಂಟು ಶಾಸಕರು ಮೊದಲ ಸಲ ಆಯ್ಕೆ

ಗೋಕಾಕ್ ಶಾಸಕ ರಮೇಶ್‌ ಜಾರಕಿಹೊಳಿ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಸಣ್ಣ ಕೈಗಾರಿಕೆ ಸಚಿವರಾಗಿ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಪೌರಾಡಳಿತ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಆನಂದಸಿಂಗ್‌ ಅವರು ಬಿಜೆಪಿ ಸರ್ಕಾರದ ಆಡಳಿತಾವಧಿಯಲ್ಲಿ ಪ್ರವಾಸೋದ್ಯಮ ಸಚಿವರಾಗಿ ಕರ್ತವ್ಯ ನಿರ್ವಹಿಸಿದ್ದರು.
ಮೈತ್ರಿ ಸರ್ಕಾರ ಅವಧಿಯಲ್ಲಿ ಎಸ್‌.ಟಿ.ಸೋಮಶೇಖರ್‌ ಬಿಡಿಎ ಅಧ್ಯಕ್ಷರಾಗಿ, ಡಾ.ಕೆ.ಸುಧಾಕರ್‌ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಹಾಗೂ ಬೈರತಿ ಬಸವರಾಜು ಅವರು ಕರ್ನಾಟಕ ಸೋಪು ಮತ್ತು ಮಾರ್ಜಕ ಲಿಮಿಟೆಡ್‌ ಅಧ್ಯಕ್ಷರಾಗಿ ಅಲ್ಪ ಕಾಲ ಕಾರ್ಯನಿರ್ವಹಿಸಿದ್ದರು. ಇವರ ಜತೆಗೆ ನಾರಾಯಣಗೌಡ, ಬಿ.ಸಿ.ಪಾಟೀಲ್‌, ಶ್ರೀಮಂತ ಪಾಟೀಲ್‌, ಶಿವರಾಂ ಹೆಬ್ಬಾರ್‌ ಮತ್ತು ಗೋಪಾಲಯ್ಯ ಅವರು ಮೊದಲ ಬಾರಿಗೆ ಸಚಿವ ಭಾಗ್ಯ ಪಡೆದುಕೊಂಡಿದ್ದಾರೆ.
ಈ ಹತ್ತು ಶಾಸಕರು 2018ರಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಶಾಸಕರಾಗಿ ಆಯ್ಕೆಯಾಗಿದ್ದರು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ.

LEAVE A REPLY

 Click this button or press Ctrl+G to toggle between Kannada and English

Please enter your comment!
Please enter your name here