ಬಂಟ್ವಾಳ: ಈ ಬಾರಿ ನಡೆದ ಗ್ರಾ.ಪಂ. ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು ಹಿಂದೆಂದೂ ಕಂಡಿರದ ರೀತಿಯಲ್ಲಿ ಅಭೂತಪೂರ್ವ ಜಯ ಗಳಿಸಿದ್ದು ಸಾಧನೆಯಾಗಿದೆ.
ಅದಕ್ಕೆ ಕಾರಣ ಬಿಜೆಪಿ ಚುನಾವಣೆ ಮೊದಲು ಹಾಕಿಕೊಂಡಿರುವ ಕಾರ್ಯಕ್ರಮ ಹಾಗೂ ಕಾರ್ಯಕರ್ತರ ಶ್ರಮವಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಎಂ. ತಿಳಿಸಿದರು.
ಇದೇ ರೀತಿಯಲ್ಲಿ ಜಿ.ಪಂ.ಹಾಗೂ ತಾ.ಪಂ. ಚುನಾವಣೆಗೆ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬುವ ನಿಟ್ಟಿನಲ್ಲಿ ಹಾಗೂ ಅಭೂತಪೂರ್ವ ಯಶಸ್ಸನ್ನು ಗಳಿಸುವ ಉದ್ದೇಶದಿಂದ
ಜ. 11ರಂದು ಮಧ್ಯಾಹ್ನ 3ಕ್ಕೆ ಬಿ.ಸಿ.ರೋಡಿನ ಬ್ರಹ್ಮರಕೂಟ್ಲುನಲ್ಲಿನ ಬಂಟವಾಳದ ಬಂಟರ ಭವನದಲ್ಲಿ ಜನಸೇವಕ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅವರು ಶನಿವಾರ ಬಂಟರ ಭವನದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ಸಂಸದ ನಳಿನ್ ಕುಮಾರ್ ಕುಟುಂಬ ಮಿಲನ, ಗ್ರಾಮ ಸ್ವರಾಜ್ಯ ಕಾರ್ಯಕ್ರಮದ ಮೂಲಕ ಗ್ರಾ.ಪಂ.ಚುನಾವಣೆಯಲ್ಲಿ ಯಶಸ್ಸು ಸಾಧಿಸಿದೆ.
ಜಿಲ್ಲೆಯಲ್ಲಿ ಒಟ್ಟು 145 ಗ್ರಾ.ಪಂ.ಗಳಲ್ಲಿ ಬಿಜೆಪಿ ಬೆಂಬಲಿತರಿಗೆ ಸ್ಪಷ್ಟ ಬಹುಮತ ಲಭಿಸಿದ್ದು, 21 ಅತಂತ್ರ ಹಾಗೂ 7ರಲ್ಲಿ ಸಮಬಲವಿದ್ದು, ಅದರಲ್ಲಿ 15ರಲ್ಲಿ ನಾವೇ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.
ಜ. 11ರ ಸಮಾವೇಶದಲ್ಲಿ ರಾಜ್ಯ ಪಂಚಾಯತ್ ರಾಜ್ ಇಲಾಖೆಯ ಸಚಿವ ಕೆ.ಎಸ್.ಈಶ್ವರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ಪರಿಷತ್ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಜಿಲ್ಲೆಯ ಶಾಸಕರು, ನಾಯಕರು ಪಾಲ್ಗೊಳ್ಳಲಿದ್ದಾರೆ. ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ ಅವರ ನೇತೃತ್ವದಲ್ಲಿ ಸಮಾವೇಶ ನಡೆಯಲಿದೆ ಎಂದು ಅವರು ತಿಳಿಸಿದರು.
ಬಿ.ಸಿ.ರೋಡಿನ ಸಮಾವೇಶದಲ್ಲಿ ಸುಮಾರು 3000 ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮದಾಸ್ ಬಂಟ್ವಾಳ, ಕ್ಷೇತ್ರ ಪ್ರಧಾನ ಕಾರ್ಯದರ್ಶಿಗಳಾದ ಡೊಂಬಯ್ಯ ಅರಳ, ರವೀಶ್ ಶೆಟ್ಟಿ ಕರ್ಕಳ ಉಪಸ್ಥಿತರಿದ್ದರು.