ಬಂಟ್ವಾಳ: ಮಾ.15ಬಂಟ್ವಾಳ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ತಾಲೂಕು ಸ್ತ್ರೀಶಕ್ತಿ ಒಕ್ಕೂಟ, ಬಂಟ್ವಾಳ ಲಯನ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್ ಬಂಟ್ವಾಳ ಟೌನ್ ಸಹಯೋಗದೊಂದಿಗೆ ನಡೆದ ತಾಲೂಕು ಮಟ್ಟದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯು ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿದ್ದ ಬಂಟ್ವಾಳ ತಾ.ಪಂ.ಅಧ್ಯಕ್ಷ ಚಂದ್ರಹಾಸ ಕರ್ಕೇರ ಅವರು, ಮಕ್ಕಳಿಗೆ ಶಿಕ್ಷಣ ಅಗತ್ಯವಾಗಿದ್ದು, ಅದನ್ನು ನೀಡುವಲ್ಲಿ ಮಹಿಳೆಯರ ಪಾತ್ರ ಹೆಚ್ಚಾಗಿದೆ. ಸರಕಾರದ ಸವಲತ್ತುಗಳನ್ನು ಸದುಪಯೋಗ ಪಡಿಸಿಕೊಂಡು ಮಕ್ಕಳನ್ನು ಉತ್ತಮ ಪ್ರಜೆಗಳನ್ನಾಗಿ ಪರಿವರ್ತಿಸಬೇಕಿದೆ ಎಂದರು.
ಕಾರ್ಯಕ್ರಮವನ್ನು ಉದ್ಘಾಟಿಸಿದ ತಾ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷೆ ಮಲ್ಲಿಕಾ ವಿ.ಶೆಟ್ಟಿ ಮಾತನಾಡಿ, ಮಹಿಳೆಯರಿಗೆ ಸ್ವಾವಲಂಬಿ ಬದುಕು ನೀಡುವಲ್ಲಿ ಸ್ತ್ರೀಶಕ್ತಿ ಗುಂಪುಗಳ ಪಾತ್ರವನ್ನು ವಿವರಿಸಿದರು. ವೇದಿಕೆಯಲ್ಲಿ ತಾ.ಪಂ.ಉಪಾಧ್ಯಕ್ಷ ಅಬ್ಬಾಸ್ ಆಲಿ, ಶಿಕ್ಷಣ ಸಂಯೋಜಕಿ ಸುಜಾತ, ಲಯನ್ಸ್ ಕ್ಲಬ್ ಅಧ್ಯಕ್ಷ ಕೃಷ್ಣಶ್ಯಾಮ್, ಕೋಶಾಧಿಕಾರಿ ದಿಶಾ ಆಶೀರ್ವಾದ್, ರೋಟರಿ ಕ್ಲಬ್ ಅಧ್ಯಕ್ಷ ಪದ್ಮನಾಭ ರೈ, ಆ್ಯನ್ಸ್ ಕ್ಲಬ್ ಅಧ್ಯಕ್ಷೆ ಸವಿತಾ ಚಿತ್ತರಂಜನ್ ಶೆಟ್ಟಿ, ಸ್ತ್ರೀಶಕ್ತಿ ಒಕ್ಕೂಟದ ಅಧ್ಯಕ್ಷೆ ಸುಧಾ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಕ್ರೀಡಾ ಸಾಧಕಿ ರಮ್ಯಾಶ್ರೀ ಜೈನ್ ಅವರನ್ನು ಗೌರವಿಸಲಾಯಿತು. ಕೊರೊನಾ ವಾರಿಯರ್ಸ್ ಅಂಗನವಾಡಿ ಕಾರ್ಯಕರ್ತೆ, ಸಾಧಕ ಅಂಗನವಾಡಿ ಕಾರ್ಯಕರ್ತೆಯರನ್ನು ಗೌರವಿಸಲಾಯಿತು. ಉತ್ತಮ ಸಾಧನೆ ಮಾಡಿದ ಸ್ತ್ರೀಶಕ್ತಿ ಗುಂಪಿಗೆ ಬಹುಮಾನ ನೀಡಲಾಯಿತು. ಬಂಟ್ವಾಳ ಸಿಡಿಪಿಒ ಗಾಯತ್ರಿ ಕಂಬಳಿ ಸ್ವಾಗತಿಸಿದರು. ಸಹಾಯಕ ಸಿಡಿಪಿಒ ಶೀಲಾವತಿ ವಂದಿಸಿದರು. ಹಿರಿಯ ಮೇಲ್ವಿಚಾರಕಿ ಭಾರತಿ ಕಾರ್ಯಕ್ರಮ ನಿರ್ವಹಿಸಿದರು. ಸ್ತ್ರೀಶಕ್ತಿ ಒಕ್ಕೂಟದ ಸದಸ್ಯರ ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳ ಆಯೋಜಿಸಲಾಗಿತ್ತು.