ನವದೆಹಲಿ: ಭಾರತದಲ್ಲಿ ಕೋವಿಡ್ ಎರಡನೇ ಅಲೆ ಸತತ ಎರಡನೇ ದಿನವೂ ದಾಖಲೆ ಸೃಷ್ಟಿಸಿದ್ದು, ಕಳೆದ 24ಗಂಟೆಯಲ್ಲಿ ದೇಶದಲ್ಲಿ 1.60 ಲಕ್ಷ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ(ಏಪ್ರಿಲ್ 13) ಬೆಳಗ್ಗೆ ಬಿಡುಗಡೆ ಮಾಡಿರುವ ಅಂಕಿಅಂಶದಲ್ಲಿ ತಿಳಿಸಿದೆ.
ದೇಶದಲ್ಲಿ ಕಳೆದ 24ಗಂಟೆಗಳಲ್ಲಿ 1,61,736 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 879 ಮಂದಿ ಸಾವನ್ನಪ್ಪಿದ್ದಾರೆ. ಸುಮಾರು 97,168 ಮಂದಿ ಗುಣಮುಖರಾಗಿರುವುದಾಗಿ ವರದಿ ಹೇಳಿದೆ.
ಭಾರತದಲ್ಲಿ ಕೋವಿಡ್ ಸೋಂಕು ಪ್ರಕರಣ ಒಟ್ಟು 1.36 ಕೋಟಿಗೆ ಏರಿಕೆಯಾಗಿದೆ. ಇದರಲ್ಲಿ 12.6 ಲಕ್ಷ ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈವರೆಗೆ 1,22,53,697 ಮಂದಿ ಕೋವಿಡ್ ನಿಂದ ಚೇತರಿಸಿಕೊಂಡಿದ್ದಾರೆ. ಕೋವಿಡ್ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 1,71,058ಕ್ಕೆ ಏರಿಕೆಯಾಗಿದೆ.
ಸೋಮವಾರ ದೇಶದಲ್ಲಿ 1.68 ಲಕ್ಷ ಕೋವಿಡ್ ಪ್ರಕರಣ ದಾಖಲೆ ಪ್ರಮಾಣದಲ್ಲಿ ಪತ್ತೆಯಾಗಿತ್ತು. ಕೋವಿಡ್ ಎರಡನೇ ಅಲೆ ದಿಢೀರ್ ಹೆಚ್ಚಳವಾದ ಪರಿಣಾಮ ಇಡೀ ಜಗತ್ತಿನಲ್ಲಿಯೇ ಬ್ರೆಜಿಲ್ ಅನ್ನು ಹಿಂದಿಕ್ಕಿ ಭಾರತ ಎರಡನೇ ಸ್ಥಾನಕ್ಕೇರಿದೆ ಎಂದು ವರದಿ ತಿಳಿಸಿದೆ.
ಕೋವಿಡ್ ಸೋಂಕು ಪ್ರಕರಣದಲ್ಲಿ ಅಮೆರಿಕ ಮೊದಲ ಸ್ಥಾನದಲ್ಲಿದ್ದು, ಈವರೆಗೆ 3,12,67,359 ಕೋವಿಡ್ ಪ್ರಕರಣ ವರದಿಯಾಗಿದೆ. ಭಾರತ ಎರಡನೇ ಸ್ಥಾನದಲ್ಲಿದ್ದು, ಬ್ರೆಜಿಲ್ ಮೂರನೇ ಸ್ಥಾನದಲ್ಲಿದೆ. ಭಾರತದಲ್ಲಿ ಈವರೆಗೆ 10.85 ಕೋಟಿ ಮಂದಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ವರದಿ ಹೇಳಿದೆ.