ಬಂಟ್ವಾಳ: ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್, ಬಂಟ್ವಾಳ ಮತ್ತು ಪಾಣೆಮಂಗಳೂರು ಮಹಿಳಾ ಕಾಂಗ್ರೆಸ್, ಬಂಟ್ವಾಳ ಮತ್ತು ಪಾಣೆಮಂಗಳೂರು ಯುವ ಕಾಂಗ್ರೆಸ್ ನ ಆಶ್ರಯದಲ್ಲಿ ಮೇ 9ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 1ರ ವರೆಗೆ ಬಿ.ಸಿ.ರೋಡಿನ ಬೆಸ್ಟ್ ಆಂಗ್ಲ ಮಾದ್ಯಮ ಶಾಲೆಯಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ.
ಕೊರೋನ ನಿಯಂತ್ರಣಕ್ಕೆ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡಲು ಸರಕಾರ ಚಿಂತಿಸಿರುವ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಲಸಿಕೆ ಪಡೆದ ವ್ಯಕ್ತಿ ಮುಂದಿನ 60 ದಿನಗಳ ಕಾಲ ರಕ್ತದಾನ ಮಾಡುವುದು ನಿಷಿದ್ಧವಾಗಿರುವುದರಿಂದ ಹಾಗೂ ಕೋವಿಡ್ ಸಮಯದಲ್ಲಿ ರಕ್ತದ ತುರ್ತು ಅಗತ್ಯ ಬರಬಹುದಾದ ಹಿನ್ನೆಲೆಯಲ್ಲಿ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಮಾನಾಥ ರೈ ಹೇಳಿದ್ದಾರೆ.
ಶಿಬಿರದಲ್ಲಿ ಭಾಗವಹಿಸುವ ರಕ್ತದಾನಿಗಳು ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಸಹಿತ ಕೋವಿಡ್ ನ ಎಲ್ಲಾ ನಿಯಮಗಳನ್ನು ಪಾಲಿಸಬೇಕು. ಕಾಂಗ್ರೆಸ್ ನ ಎಲ್ಲಾ ಕಾರ್ಯಕರ್ತರು ಶಿಬಿರದಲ್ಲಿ ಭಾಗವಹಿಸಿ ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡುವಂತೆ ಬಿ.ರಮಾನಾಥ ರೈ ಕೋರಿದ್ದಾರೆ.