ಮಂಗಳೂರು: ಶಿಕ್ಷಕರು, ಪಿಡಿಒಗಳು, ಕಾರ್ಮಿಕ ಇಲಾಖೆಯ ಸಿಬಬಂದಿಯನ್ನು ಕೊರೊನಾ ವಾರಿಯರ್ಸ್ ಪಟ್ಟಿಯಿಂದ ಹೊರಗಿಟ್ಟಿರುವುದು ಸರಿಯಲ್ಲ. ಕೊರೊನಾ ನಿಯಂತ್ರಣ ಕಾರ್ಯದಲ್ಲಿ ದುಡಿಯುತ್ತಿರುವ ಎಲ್ಲರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿ ಸರಕಾರದ ಎಲ್ಲ ವಿಶೇಷ ಸೌಲಭ್ಯ ನೀಡಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.
ಗ್ರಾಮ ಪಂಚಾಯತ್ ಮಟ್ಟದಲ್ಲಿ ಕೊರೊನಾ ಸೋಂಕು ನಿಯಂತ್ರಣ ಕಾರ್ಯದಲ್ಲಿ ಶಾಲಾ ಶಿಕ್ಷಕರು ಮತ್ತು ಗ್ರಾಮ ಪಂಚಾಯತ್ ಗಳ ಪಂಚಾಯತು ಅಭಿವೃದ್ಧಿ ಅಧಿಕಾರಿಗಳ (ಪಿಡಿಒ) ಪಾತ್ರ ಮಹತ್ವದಾಗಿದ್ದು ಇವರನ್ನು ಕೂಡ ಕೊರೊನಾ ವಾರಿಯರ್ಸ್ ಎಂದು ಸರಕಾರ ಕೂಡಲೇ ಪರಿಗಣಿಸಬೇಕು ಎಂದು ರಮಾನಾಥ ರೈ ಒತ್ತಾಯಿಸಿದ್ದಾರೆ.
ಇದೇ ರೀತಿಯಲ್ಲಿ ವಲಸೆ ಕಾರ್ಮಿಕರು ಸೇರಿದಂತೆ ಇನ್ನಿತರ ಕಾರ್ಮಿಕರೊಂದಿಗೆ ಸಂಪರ್ಕ ಹೊಂದಿರುವ ಮತ್ತು ಕೊರೊನಾ ನಿಯಂತ್ರಣ ಕಾರ್ಯದಲ್ಲಿ ತೊಡಗಿರುವ ಕಾರ್ಮಿಕ ಇಲಾಖೆಯ ನೌಕರರಿಗೆ ಕೂಡ ಕೊರೊನಾ ವಾರಿಯರ್ಸ್ ಗಳಿಗೆ ನೀಡಲಾಗುವ ಸೌಲಭ್ಯಗಳನ್ನು ನೀಡಬೇಕು ಎಂದವರು ಪತ್ರಿಕಾ ಹೇಳಿಕೆಯ ಮೂಲಕ ಸರಕಾರವನ್ನು ಒತ್ತಾಯಿಸಿದ್ದಾರೆ.
ಈಗಾಗಲೇ ನಮ್ಮ ರಾಜ್ಯದಲ್ಲಿ ಹಲವು ಮಂದಿ ಶಿಕ್ಷಕರು, ಶಿಕ್ಷಣ ಇಲಾಖೆ ಸಿಬ್ಬಂದಿ ಕೋವಿಡ್ ಸೋಂಕಿನಿಂದಾಗಿ ಸಾವಿಗೀಡಾಗಿದ್ದಾರೆ. ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ಹಾಗೂ ಬೋಧಕೇತರ ಸಿಬ್ಬಂದಿಯನ್ನು ಕೋವಿಡ್ ಕಾರ್ಯಕ್ಕಾಗಿ ತೊಡಗಿಸಿಕೊಳ್ಳಲಾಗಿದೆ. ಇವರೆಲ್ಲರನ್ನು ಕೊರೊನಾ ವಾರಿಯರ್ಸ್ ಎಂದು ಪರಿಗಣಿಸುವುದು ಅಗತ್ಯವಾಗಿದೆ.