ಬ್ರಹ್ಮಾವರ: ಬ್ರಹ್ಮಾವರ ತಾಲೂಕಿನ ಮಟಪಾಡಿ ಭಾಗದಲ್ಲಿ ಕಳೆದ ಹಲವಾರು ದಿನಗಳಿಂದ ಸಾರ್ವಜನಿಕರ ನಿದ್ದೆಗೆಡಿಸಿದ ಚಿರತೆಯನ್ನು ಅರಣ್ಯ ಇಲಾಖೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.

ಬ್ರಹ್ಮಾವರ ತಾಲೂಕಿನ ಮಟಪಾಡಿ ಭಾಗದಲ್ಲಿ ಚಿರತೆ ಹಾವಳಿ ಹೆಚ್ಚಾಗಿದ್ದು ಸಾಕು ಪ್ರಾಣಿಗಳು ಕೂಡಾ ಚಿರತೆಗೆ ಆಹಾರವಾಗಿದ್ದವು. ಈ ಬಗ್ಗೆ ಗ್ರಾಮಸ್ಥರು ಹಲವಾರು ಬಾರಿ ಅರಣ್ಯ ಇಲಾಖೆಗೆ ಮನವಿ ಸಲ್ಲಿಸಿದ್ದರು. ಇನ್ನು ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಬೋನು ಇರಿಸಿದ್ದರು. ಈ ಬೋನಿಗೆ ನಿನ್ನೆ ರಾತ್ರಿ ಚಿರತೆ ಬಿದ್ದಿದೆ.
ಇನ್ನು ಬೋನಿಗೆ ಬಿದ್ದ ಚಿರತೆ ಕೂಗುತ್ತಿದ್ದನ್ನು ಗಮನಿಸಿ ಗ್ರಾಮಸ್ಥರು ಅರಣ್ಯ ಇಲಾಖೆಯ ಸಿಬಂದಿಗಳಿಗೆ ಮಾಹಿತಿ ನೀಡಿದ್ದು, ವಲಯ ಅರಣ್ಯಾಧಿಕಾರಿಗಳು ಮತ್ತು ಸಿಬಂದಿಗಳು ಸ್ಥಳಕ್ಕೆ ಭೇಟಿ ನೀಡಿ ಚಿರತೆ ಇರುವ ಬೋನನ್ನು ವನ್ಯಧಾಮಕ್ಕೆ ಕೊಂಡೊಯ್ದು ಚಿರತೆಯನ್ನು ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟಿದ್ದಾರೆ. ಸುಮಾರು ಆರು ವರ್ಷ ಪ್ರಾಯದ ಹೆಣ್ಣು ಚಿರತೆ ಇದಾಗಿದ್ದು, ಇದೀಗ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಬಳಿಕ ಅರಣ್ಯ ಅಧಿಕಾರಿಗಳ ಕಾರ್ಯವನ್ನು ಗ್ರಾಮಸ್ಥರು ಅಭಿನಂದಿಸಿದ್ದಾರೆ