ಬೆಂಗಳೂರು: ಬೆಂಗಳೂರು ಸೇರಿದಂತೆ ಮಲೆನಾಡು, ಕರಾವಳಿಯ ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿ ಸಮುದ್ರದ ಭಾಗದ ಆಂಧ್ರ ಪ್ರದೇಶದ ಉತ್ತರ ಕರಾವಳಿಯಲ್ಲಿ ಎದ್ದಿದ್ದ ಮೇಲ್ಮೈ ಸುಳಿಗಾಳಿಯು ದಕ್ಷಿಣ ಕರಾವಳಿಯತ್ತ ಸಾಗಿದೆ. ಅದು ಸಮುದ್ರ ಮಟ್ಟದಿಂದ ಸುಮಾರು 3.5ಕಿಲೋ ಮೀಟರ್ ಎತ್ತರದಲ್ಲಿದೆ. ಅದೇ ರೀತಿ ಬಂಗಾಳ ಕೊಲ್ಲಿ ಪಶ್ಚಿಮ ಸಮುದ್ರ ಭಾಗದಲ್ಲಿ ಉಂಟಾಗಿದ್ದ ಮತ್ತೊಂದು ಮೇಲ್ಮೈ ಸುಳಿಗಾಳಿಯು ದುರ್ಬಲಗೊಂಡಿಲ್ಲ. ಈ ಕಾರಣದಿಂದ ಕರ್ನಾಟಕದ ಒಳನಾಡು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ.
ಇನ್ನು ಕರ್ನಾಟಕದ ಕರಾವಳಿ ಪ್ರದೇಶದಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದ್ದು, ಇಂದಿನಿಂದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಚಿಕ್ಕಮಗಳೂರು, ಮೈಸೂರು, ಚಾಮರಾಜನಗರ, ಹಾಸನ, ಕೊಡಗು, ಶಿವಮೊಗ್ಗ ಹಾಗೂ ಮಧ್ಯ ಕರ್ನಾಟಕದ ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ. ಆದರೆ, ಉತ್ತರ ಕರ್ನಾಟಕದ ಪ್ರದೇಶಗಳಲ್ಲಿ ಮಳೆಯ ಅಬ್ಬರ ಕಡಿಮೆಯಾಗಲಿದೆ. ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರದಲ್ಲೂ ಇಂದು ತುಂತುರು ಮಳೆಯಾಗುವ ಸಾಧ್ಯತೆ ಇದೆ.
ಅಕ್ಟೋಬರ್ 10ರಂದು ಗುಲ್ಬರ್ಗ, ಯಾದಗಿರಿ, ರಾಯಚೂರು, ಬಳ್ಳಾರಿ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಮತ್ತು ಕೊಪ್ಪಳದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಆದ್ರೆ ಕರ್ನಾಟಕಕ್ಕೆ ಅಕ್ಟೋಬರ್ 2ನೇ ವಾರದಲ್ಲಿ ಹಿಂಗಾರು ಪ್ರವೇಶವಾಗಲಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಚಾಮರಾಜನಗರ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದ ಜೊತೆ ಮಳೆಯಾಗುವ ಸಾಧ್ಯತೆಯಿದೆ.