ಮೂಡಿಗೆರೆ: ಬಂಟ್ವಾಳ ಮೂಲದ ಮಹಮ್ಮದ್ ಸಾವದ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.
ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸರ ತಂಡ ನಿನ್ನೆ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ಎಂಬಲ್ಲಿ ಬಂಧಿಸಿ ಇಂದು ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನೂ ಮೂವರು ಆರೋಪಿಗಳ ತಲೆಮರೆಸಿಕೊಂಡಿದ್ದು, ಅವರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಗಾಂಜಾ ವ್ಯವಹಾರ
ಪೊಲೀಸರ ಪ್ರಾಥಮಿಕ ತನಿಖೆಯಿಂದ ಈ ಕೊಲೆ ಮಾದಕವಸ್ತು ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಿಂದ ಸಂಭವಿಸಿದೆ ಎಂದು ತಿಳಿದುಬಂದಿದೆ. ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದರು ಎಂದು ತಿಳಿದುಬಂದಿದೆ.