Friday, April 19, 2024

ಗೃಹಜ್ಯೋತಿ, ಗೃಹಲಕ್ಷ್ಮಿ ಯೋಜನೆ ಚಾಲನೆಗೆ ದಿನಾಂಕ ಫಿಕ್ಸ್, ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್‌ 1 ರಂದು ಹಾಗೂ ಗೃಹ ಲಕ್ಷ್ಮಿ ಯೋಜನೆಗೆ ಆಗಸ್ಟ್‌ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ.

ಈ ಬಗ್ಗೆ ಮುಖ್ಯಮಂತ್ರಿಯವರ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಸರಣಿ ಟ್ವೀಟ್ ಮಾಡಲಾಗಿದೆ. “ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ ಸರಳಗೊಳಿಸಬೇಕು. ಅನಗತ್ಯ ಮಾಹಿತಿ, ದಾಖಲೆಗಳನ್ನು ಕೇಳಬಾರದು ಎಂದು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಜೊತೆಗೆ ಅರ್ಜಿಗಳನ್ನು ತಿರಸ್ಕರಿಸಿದಲ್ಲಿ, ಅದು ಸಕಾರಣವಾಗಿರಬೇಕು. ಕುಂಟು ನೆಪ ನೀಡಿ ತಿರಸ್ಕರಿಸುವಂತಿಲ್ಲ ಎಂದು ಎಚ್ಚರಿಕೆಯನ್ನು ನೀಡಿದ್ದೇನೆ” ಎಂದು ಹೇಳಿದ್ದಾರೆ.

“ಎಲ್ಲ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಅರ್ಜಿಗಳು ಸಲ್ಲಿಕೆಯಾಗುವ ಕಾರಣ, ಅಪಾರ ಪ್ರಮಾಣದ ದತ್ತಾಂಶ ಸಲ್ಲಿಕೆಗೆ ಅನುಗುಣವಾಗಿ ಸೇವಾ ಸಿಂಧು ಪೋರ್ಟಲ್‌ ನ ಸಾಮರ್ಥ್ಯ ವೃದ್ಧಿಸುವಂತೆ ಇ-ಆಡಳಿತ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದೇನೆ” ಎಂದು ಹೇಳಿದ್ದಾರೆ.

“ಗೃಹ ಜ್ಯೋತಿ ಯೋಜನೆಗೆ ಆಗಸ್ಟ್‌ 1 ರಂದು ಕಲಬುರಗಿಯಲ್ಲಿ ಚಾಲನೆ ನೀಡುವ ಕುರಿತು ಯೋಚಿಸುತ್ತಿದ್ದೇವೆ. ಈ ಯೋಜನೆಯ ಮಾರ್ಗಸೂಚಿಗಳ ಕುರಿತು ಇರುವ ಎಲ್ಲ ಗೊಂದಲಗಳನ್ನು ನಿವಾರಿಸಿ, ನಾಗರಿಕರಿಗೆ ಅರಿವು ಮೂಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ಉಲ್ಲೇಖಿಸಲಾಗಿದೆ.

“ಗೃಹ ಜ್ಯೋತಿ ಯೋಜನೆಗೆ ಸೇವಾ ಸಿಂಧು ಪೋರ್ಟಲ್‌ ಮೂಲಕ ನೋಂದಾಯಿಸಲು ಅವಕಾಶವಿದೆ. ಇದಲ್ಲದೆ, ಎಸ್ಕಾಂಗಳ ಎಲ್ಲ ಕಚೇರಿಗಳಲ್ಲಿ ಹೆಲ್ಪ್‌ ಡೆಸ್ಕ್‌ ಸ್ಥಾಪಿಸಲಾಗುವುದು. ಜೂನ್‌ 15 ರಿಂದ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಲಿದೆ. ಬೆಂಗಳೂರು ಒನ್‌, ಕರ್ನಾಟಕ ಒನ್‌, ಗ್ರಾಮ ಒನ್‌ ಕೇಂದ್ರಗಳ ಮೂಲಕ ಹಾಗೂ ಮನೆಯಲ್ಲಿಯೇ ಕಂಪ್ಯೂಟರ್‌ ಮೂಲಕ ಅಥವಾ ಮೊಬೈಲ್‌ ಆಪ್‌ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು” ಎಂದು ಹೇಳಿದ್ದಾರೆ.

“ಹೊಸ ಮನೆ, ಹೊಸ ಬಾಡಿಗೆದಾರರಿಗೆ ರಾಜ್ಯದ ವಿದ್ಯುತ್‌ ಬಳಕೆಯ ಸರಾಸರಿ ಆಧಾರದಲ್ಲಿ ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು. ಒಂದು ವರ್ಷದ ಸರಾಸರಿ ಲಭ್ಯವಾದ ನಂತರ, ಈ ದತ್ತಾಂಶವನ್ನು ಆಧರಿಸಿ, ಉಚಿತ ವಿದ್ಯುತ್‌ ಸೌಲಭ್ಯ ನೀಡಲಾಗುವುದು” ಎಂದು ತಿಳಿಸಲಾಗಿದೆ

ಹಳೆ ವಿದ್ಯುತ್‌ ಬಿಲ್‌ ಬಾಕಿ ಪಾವತಿಗೆ ಸೆಪ್ಟೆಂಬರ್‌ 30 ರ ವರೆಗೆ ಅವಕಾಶ ಕಲ್ಪಿಸಲಾಗಿದೆ. ಗೃಹಜ್ಯೋತಿ ಯೋಜನೆಗೆ ಆಧಾರ್‌, ಆರ್. ಆರ್. ಸಂಖ್ಯೆ, ಬಾಡಿಗೆದಾರರು ಕರಾರು ಪತ್ರ ಹಾಗೂ ಅದೇ ವಿಳಾಸದ ಮತದಾರರ ಗುರುತು ಚೀಟಿ ಮಾಹಿತಿ ಸಲ್ಲಿಸಿ, ಸೌಲಭ್ಯ ಪಡೆಯಬಹುದಾಗಿದೆ” ಎಂದು ಹೇಳಿದ್ದಾರೆ.

“ಗೃಹ ಲಕ್ಷ್ಮಿ ಯೋಜನೆಯನ್ನು ಆಗಸ್ಟ್‌ 17 ಅಥವಾ 18 ರಂದು ಬೆಳಗಾವಿಯಲ್ಲಿ ಚಾಲನೆ ನೀಡುವ ಕುರಿತು ಚರ್ಚಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಜೂನ್‌ 15 ರಿಂದ ಪ್ರಾರಂಭವಾಗಲಿದೆ. ಈ ಯೋಜನೆಗೆ ಆನ್‌ಲೈನ್‌ ನಲ್ಲಿ ಸೇವಾ ಸಿಂಧು ಪೋರ್ಟಲ್‌ ಮೂಲಕ ಅರ್ಜಿ ಸಲ್ಲಿಸಬಹುದು. ಅಂತೆಯೇ ನಾಡಕಚೇರಿಗಳಲ್ಲಿ ಖುದ್ದಾಗಿ ಅರ್ಜಿ ಸಲ್ಲಿಸಬಹುದು. ಇದಕ್ಕಾಗಿ ಪ್ರತ್ಯೇಕ ಕೌಂಟರುಗಳನ್ನು ಸ್ಥಾಪಿಸಲು ತೀರ್ಮಾನಿಸಲಾಗಿದೆ” ಎಂದು ಹೇಳಿದ್ದಾರೆ.

ಅರ್ಜಿದಾರರು ರೇಷನ್‌ ಕಾರ್ಡ್‌ ಸಂಖ್ಯೆ, ಯಜಮಾನಿಯ ಹಾಗೂ ಪತಿಯ ಆಧಾರ್‌ ಕಾರ್ಡ್‌ ಸಂಖ್ಯೆ, ಆಧಾರ್‌ ಸಂಯೋಜನೆಯಾಗಿರುವ ಬ್ಯಾಂಕ್‌ ಖಾತೆಯ ವಿವರವನ್ನು ಒದಗಿಸಬೇಕು. ಈ ದಾಖಲೆಗಳ ಪ್ರತಿಗಳನ್ನು ಆಫ್‌ಲೈನ್‌ ಅರ್ಜಿಗಳೊಂದಿಗೂ ಸಲ್ಲಿಸಬಹುದು” ಎಂದು ಹೇಳಿದ್ದಾರೆ.

“ಅರ್ಹ ಫಲಾನುಭವಿಗಳಿಗೆ ಡಿಬಿಟಿ ಮೂಲಕ ನೇರವಾಗಿ ಬ್ಯಾಂಕ್‌ ಖಾತೆಗೆ ನೆರವಿನ ಮೊತ್ತ ಜಮೆ ಆಗಲಿದೆ. ಗೃಹಲಕ್ಷ್ಮಿ ಯೋಜನೆಯು ರಾಜ್ಯದ ಶೇ. 85 ಕ್ಕೂ ಹೆಚ್ಚು ಕುಟುಂಬಗಳನ್ನು ತಲುಪಲಿದೆ ಎಂದು ಅಂದಾಜಿಸಲಾಗಿದೆ. ತೆರಿಗೆ ಪಾವತಿದಾರರಲ್ಲದ ಎಪಿಎಲ್‌ ಕಾರ್ಡುದಾರರಿಗೂ ಈ ಸೌಲಭ್ಯ ದೊರೆಯಲಿದೆ” ಎಂದು ಟ್ವೀಟ್ ಮಾಡಲಾಗಿದೆ.

More from the blog

ಜನಪರವಾದ ಕೆಲಸ ಮಾಡದ ಬಿಜೆಪಿಗೆ ಸೋಲು ಖಚಿತ-ಚಾಮರಸ ಮಾಲೀಪಾಟೀಲ್

ಬಂಟ್ವಾಳ: 2024 ರ ಚುನಾವಣೆಯಲ್ಲಿ ಬಿಜೆಪಿ ಹಾಗೂ ಮಿತ್ರಪಕ್ಷವನ್ನು ಸೋಲಿಸುವ ತೀರ್ಮಾನವನ್ನು ಕರ್ನಾಟಕ ರಾಜ್ಯ ರೈತ ಸಂಘ ಮಾಡಿದ್ದು, ಈ ದೃಷ್ಟಿಯಿಂದ ರೈತರ ಮನವೊಲಿಸುವ ಕಾರ್ಯದಲ್ಲಿ ತೊಡಗಿದ್ದೇವೆ, ಈ ಬಾರಿ ಬಿಜೆಪಿ ನೆಲಕಚ್ಚುವುದು...

ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ಭೇಟಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್‌ ರವರು ದಿನಾಂಕ 19-04-2024 ರಂದು ಬಂಟ್ವಾಳ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಭೇಟಿ ನೀಡಿದರು. ಸೂಕ್ಷ್ಮ ಮತಗಟ್ಟೆಗಳಿರುವ ಪ್ರದೇಶಗಳಿಗೆ...

ಟ್ಯಾಂಕರ್ ಹರಿದು ಪಾದಚಾರಿ ಸ್ಥಳದಲ್ಲೇ ಸಾವು

ಮಂಗಳೂರು: ಟ್ಯಾಂಕರ್ ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ಬೆಳಗ್ಗೆ ಕೂಳೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಉತ್ತರ ಪ್ರದೇಶ ಮೂಲದ ಕಾರ್ಮಿಕ ಗುಡ್ಡು ಯಾದವ್ ಎನ್ನಲಾಗಿದೆ ಯಾದವ್ ರಸ್ತೆ ಬದಿ‌ ನಡೆದುಕೊಂಡು...

ಏ.21ರಂದು ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ

ಮತದಾರರನ್ನು ಮತಗಟ್ಟೆಗೆ ಸೆಳೆಯುವ ಸಲುವಾಗಿ ಚುನಾವಣಾ ಆಯೋಗ ಸ್ವೀಪ್ ಕಾರ್ಯಕ್ರಮದ ಮೂಲಕ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಅದರಂತೆ ಎ.21ರಂದು ಎಲ್ಲಾ ಬೂತ್ ಮತಗಟ್ಟೆಗಳಲ್ಲಿ ನಮ್ಮ ನಡೆ ಮತಗಟ್ಟೆಯ ಕಡೆ ಅಭಿಯಾನ ಹಮ್ಮಿಕೊಂಡಿದ್ದು, ಬಂಟ್ವಾಳ...