Wednesday, October 18, 2023

ಅರಣ್ಯಾಧಿಕಾರಿಗೆ ಅವಾಚ್ಯ ಶಬ್ಧ ಬಳಕೆ ; ಶಾಸಕ ಹರೀಶ್ ಪೂಂಜ ವಿರುದ್ಧ FIR ದಾಖಲು

Must read

ಬೆಳ್ತಂಗಡಿ: ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗ ಒತ್ತುವರಿ ಮಾಡಿ ನಿರ್ಮಿಸುತ್ತಿದ್ದ ಮನೆಯನ್ನು ತೆರವುಗೊಳಿಸಲು ತೆರಳಿದ್ದ ಉಪ್ಪಿನಂಗಡಿ ಅರಣ್ಯಾಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯವಾಗಿ ನಿಂದಿಸಿ, ಬೆದರಿಕೆ ಹಾಕಿರುವ ಆರೋಪದಲ್ಲಿ ಶಾಸಕ ಹರೀಶ್ ಪೂಂಜಾ ವಿರುದ್ಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಪ್ಪಿನಂಗಡಿ ವಲಯ ಅರಣ್ಯ ಅಧಿಕಾರಿ ಜಯಪ್ರಕಾಶ್ ಕೆ ಕೆ ಅವರು ನೀಡಿದ ದೂರಿನಂತೆ ಶಾಸಕ ಹರೀಶ್ ಪೂಂಜಾ ವಿರುದ್ಧ ಐಪಿಸಿ 1860(U/s -143,353,504,149) ಅಡಿಯಲ್ಲಿ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅರಣ್ಯ ಭೂಮಿಯ ಅತಿಕ್ರಮಣಕ್ಕೆ ಸಂಬಂಧಿಸಿದಂತೆ ವಿವಾದಕ್ಕೆ ಕಾರಣವಾಗಿದ್ದ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಸರ್ವೆ ನಂಬರ್ 309 ರ ನಿಡ್ಲೆ ವಿಸ್ತೃತ ಬ್ಲಾಕ್ 2ರಲ್ಲಿ ಅಮ್ಮಿನಡ್ಕ -ಕೆದ್ದ ನಿವಾಸಿ ಲೋಲಾಕ್ಷ ಯಾನೆ ಅನಂತು ಅವರು ಅರಣ್ಯ ಇಲಾಖೆಯ ಜಾಗವನ್ನು ಒತ್ತುವರಿ ಮಾಡಿ ನೂತನ ಮನೆ ನಿರ್ಮಾಣಕ್ಕೆ ಮುಂದಾಗಿರುವ ಬಗ್ಗೆ ಮಂಗಳೂರು ಅರಣ್ಯ ಇಲಾಖೆಗೆ ದೂರು ಬಂದಿತ್ತು. ಈ ಹಿನ್ನೆಲೆ ಅ.6 ರಂದು ಅರಣ್ಯ ಇಲಾಖೆ ಸಿಬ್ಬಂದಿ ನೂತನ ಮನೆಯ ಫೌಂಡೇಶನ್ ತೆರವುಗೊಳಿಸಿದ್ದರು.

ಘಟನೆ ವಿಚಾರ ತಿಳಿದು ಶಾಸಕ ಹರೀಶ್ ಪೂಂಜ ಅವರು ಅಕ್ಟೋಬರ್ 7 ರಂದು ಸ್ಥಳಕ್ಕೆ ಭೇಟಿ ನೀಡಿ ತೆರವು ಕಾರ್ಯಾಚರಣೆಯನ್ನು ವಿರೋಧಿಸಿ, ಅದನ್ನು ತಡೆದರು. ಅಲ್ಲದೆ ಅಧಿಕಾರಿಗಳ ಸಮ್ಮುಖದಲ್ಲಿ ಉಪ್ಪಿನಂಗಡಿ ಅರಣ್ಯಾಧಿಕಾರಿಯಾಗಿರುವ ತನ್ನನ್ನು ಅವಾಚ್ಯ ಪದ ಬಳಸಿ ನಿಂದಿಸಿದ್ದಲ್ಲದೆ, ನಿವೇಶನವನ್ನು ತೆರವುಗೊಳಿಸಿದ್ದಲ್ಲಿ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ಬೆದರಿಕೆ ಹಾಕಿದರು.

ಆದುದರಿಂದ ಅರಣ್ಯ ಇಲಾಖಾ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿ ಉಪ್ಪಿನಂಗಡಿ ಅರಣ್ಯಾಧಿಕಾರಿಯಾಗಿರುವ ತನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ, ಬೆದರಿಕೆ ಹಾಕಿರುವ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮತ್ತು ಅವರ ಬೆಂಬಲಿಗರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಉಪ್ಪಿನಂಗಡಿ ಅರಣ್ಯಾಧಿಕಾರಿ ಜಯಪ್ರಕಾಶ್ ಕೆ.ಕೆ. ಅ.13ರಂದು ಧರ್ಮಸ್ಥಳ ಪೊಲೀಸ್ ಠಾಣೆಗೆ ನೀಡಿರುವ ದೂರಿನಲ್ಲಿ ಒತ್ತಾಯಿಸಿದ್ದಾರೆ.

More articles

Latest article