ಮಂಗಳೂರು: 17-ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಚುನಾವಣಾ ಮತದಾನ ಪೂರ್ಣಗೊಂಡಿದ್ದು, ಮುಂದಿನ ಅವಧಿಯಲ್ಲಿ ಚುನಾವಣಾ ಪ್ರಕ್ರಿಯೆಗಳಿಗಾಗಿ ನಿಯೋಜಿತಗೊಂಡ ವಿವಿಧ ತಂಡಗಳ ಕಾರ್ಯಭಾರ ಕುರಿತು ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಮುಲೈ ಮುಗಿಲನ್ ಎಂ.ಪಿ. ಅವರ ಅಧ್ಯಕ್ಷತೆಯಲ್ಲಿ ಏ.29 ರ ಸೋಮವಾರ ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ಸಂಬಂಧಿಸಿದ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಹಮ್ಮಿಕೊಳ್ಳಲಾಗಿತ್ತು.
ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಲು ರಚಿಸಲಾಗಿರುವ ಅಂತರ್ ರಾಜ್ಯ ಚೆಕ್ ಪೋಸ್ಟ್ ಗಳಲ್ಲಿ, ಸುಳ್ಯದ ಈಶ್ವರ ಮಂಗಳ, ತಲಪಾಡಿ ಹಾಗೂ ಬಂಟ್ವಾಳದ ಆನೇಕಲ್ ನ ಚೆಕ್ ಪೋಸ್ಟ್ ಗಳು ಮುಂದೆಯೂ ಕಟ್ಟೆಚ್ಚರದಲ್ಲಿ ಕಾರ್ಯನಿರ್ವಹಿಸಬೇಕು, ಉಳಿದಂತೆ ವಿಧಾನಸಭಾ ಕ್ಷೇತ್ರವಾರು ರಚನೆಯಾಗಿರುವ
ಫ್ಲೈಯಿಂಗ್ ಸ್ಕ್ವಾಡ್ ತಂಡವೊಂದು ಪೂರ್ಣ ಅವಧಿಯಲ್ಲಿ ಕಾರ್ಯನಿರ್ವಹಿಸಬೇಕು, ಈ ಹಿಂದೆ ಖಾಸಗಿ ಕಾರ್ಯಕ್ರಮಗಳಿಗಾಗಿ ಏಕಗವಾಕ್ಷಿ ಕೇಂದ್ರದಲ್ಲಿ ಅನುಮತಿ ಪಡೆಯುತ್ತಿದ್ದಂತೆ ಇನ್ನೂ ಮುಂದೆ ಖಾಸಗಿ ಕಾರ್ಯಕ್ರಮಗಳಿಗೆ ಅನುಮತಿ ಪಡೆಯುವ ಅಗತ್ಯವಿರುವುದಿಲ್ಲ ಎಂದು ಜಿಲ್ಲಾ ಚುನಾವಣಾಧಿಕಾರಿಗಳು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಮಾದರಿ ನೀತಿ ಸಂಹಿತೆ ನೋಡಲ್ ಅಧಿಕಾರಿಯೂ ಆಗಿರುವ ಡಾ.ಆನಂದ್ ಕೆ, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್ ಜಿ, ಇತರೆ ಅಧಿಕಾರಿಗಳು ಇದ್ದರು.
ಎಲ್ಲಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು ವಿಡಿಯೋ ಸಂವಾದದ ಮೂಲಕ ಭಾಗವಹಿಸಿದ್ದರು.