ಬಂಟ್ವಾಳ: ಕರ್ನಾಟಕ ರಾಜ್ಯದ ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಬಿ. ಕೆ. ಚಂದ್ರಮೌಳೇಶ್ವರ ಇವರ ಹತ್ಯೆಯನ್ನು ಖಂಡಿಸಿ ದ.ಕ. ಜಿಲ್ಲೆಯ ಬಂಟ್ವಾಳ ತಾಲೂಕು ಕಂದಾಯ ನೌಕರರ ಸಂಘದ ವತಿಯಿಂದ ಬಂಟ್ವಾಳ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿ, ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಬಂಟ್ವಾಳ ತಾಲೂಕು ತಹಶೀಲ್ದಾರರ ಮುಖಾಂತರ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್. ಅವರು, ಇದು ಅತ್ಯಂತ ಗಂಭೀರ ವಿಷಯವಾಗಿದ್ದು, ಸರ್ಕಾರದ ಪರವಾಗಿ ಕರ್ತವ್ಯ ನಿರ್ವಹಿಸುವ ಸಮಯದಲ್ಲಿ ಸರ್ಕಾರಿ ನೌಕರರಿಗೆ ರಕ್ಷಣೆ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು. ಪಾಣೆಮಂಗಳೂರು ಹೋಬಳಿಯ ಕಂದಾಯ ನಿರೀಕ್ಷಕ ರಾಮ ಇವರು ಇದೊಂದು ಘೋರ ಕೃತ್ಯವಾಗಿದ್ದು, ಸರ್ಕಾರಿ ನೌಕರರು ಭಯದ ವಾತಾವರಣದಲ್ಲಿ ಕೆಲಸ ಮಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದರು.
ಬಂಟ್ವಾಳ ತಾಲೂಕು ಗ್ರಾಮಲೆಕ್ಕಿಗರ ಸಂಘದ ಅಧ್ಯಕ್ಷ ತೌಫೀಕ್ ರವರು ಮನವಿಯನ್ನು ಓದಿ ತಹಶೀಲ್ದಾರರಿಗೆ ಹಸ್ತಾಂತರಿಸಿದರು.
ಇದೇ ಸಮಯದಲ್ಲಿ ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೌನ ಪ್ರಾರ್ಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಂದಾಯ ನೌಕರ ಸಂಘದ ಉಪಾಧ್ಯಕ್ಷ ಜೆ. ಜನಾರ್ಧನ್ ಮತ್ತು ತಾಲೂಕು ಕಚೇರಿಯ ಉಪತಹಶೀಲ್ದಾರರು, ಕಂದಾಯ ನಿರೀಕ್ಷಕರು ಹಾಗೂ ಸಿಬ್ಬಂದಿ ವರ್ಗ ಮತ್ತು ಭೂಮಾಪನ ಶಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
