ಬಂಟ್ವಾಳ: ಇಲ್ಲಿನ ಪಂಜಿಕಲ್ಲು ಗ್ರಾಮದ ಆಚಾರಿಪಲ್ಕೆ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಗಭೀಣಿಯರು ಸಹಿತ ರೋಗಿಗಳಿಗೆ ಸೂಕ್ತ ಸ್ಪಂದನೆ ಮತ್ತು ಚಿಕಿತ್ಸೆ ನೀಡುತ್ತಿಲ್ಲ ಎಂಬ ನಾಗರಿಕರ ಆರೋಪದ ಹಿನ್ನೆಲೆಯಲ್ಲಿ ಇಲ್ಲಿನ ವೈದ್ಯಾಧಿಕಾರಿ ಡಾ.ಮಧುಸೂದನ್ ಇವರನ್ನು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಗೆ ವರ್ಗಾಯಿಸಲಾಗಿದೆ.

ಕಳೆದ ಎರಡು ರ‍್ಷಗಳಿಂದ ಇವರ ವಿರುದ್ಧ ಸಾರ್ವಜನಿಕರಿಂದ ವ್ಯಾಪಕ ದೂರು ಕೇಳಿ ಬಂದಿತ್ತು. ಈ ಬಗ್ಗೆ ಗ್ರಾಮ ಪಂಚಾಯಿತಿ ಸಭೆಯಲ್ಲಿ ಕೂಡಾ ನಿರ್ಣಯ ಕೈಗೊಂಡು ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಸೇರಿದಂತೆ ತಾಲ್ಲೂಕು ಮತ್ತು ಜಿಲ್ಲಾ ಆರೋಗ್ಯಾಧಿಕಾರಿಗೆ ದೂರು ಸಲ್ಲಿಸಲಾಗಿತ್ತು. ಈಚೆಗಷ್ಟೇ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿಹಣಾಧಿಕಾರಿ ಡಾ.ಕುಮಾರ್ ಸಹಿತ ಮೇಲಾಧಿಕಾರಿಗಳ ಆದೇಶ ಪಾಲಿಸಿಲ್ಲ ಎಂಬ ಆರೋಪವೂ ಇವರ ಮೇಲಿತ್ತು. ಇದಕ್ಕಾಗಿ ಇವರನ್ನು ಬಂಟ್ವಾಳ ಸಾರ್ವಜನಿಕ ಆಸ್ಪತ್ರೆಯ ತುರ್ತು ಚಿಕಿತ್ಸಾ ವಿಭಾಗಕ್ಕೆ ತಾತ್ಕಾಲಿಕವಾಗಿ ವರ್ಗಾವಣೆ ಮಾಡಲಾಗಿದೆ ಎಂದು ಆದೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಇಲ್ಲಿಗೆ ಪುಂಜಾಲಕಟ್ಟೆ ವೈದ್ಯಾಧಿಕಾರಿ ಡಾ.ಸತೀಶ್ ಎಂ.ಸಿ.ಇವರನ್ನು ವಾರದಲ್ಲಿ ನಾಲ್ಕು ದಿನಗಳಿಗೆ ತಾತ್ಕಾಲಿಕವಾಗಿ ನಿಯೋಜಿಸಲಾಗಿದೆ. ಕೊನೆಗೂ ಇಲ್ಲಿನ ನಾಗರಿಕರ ಬೇಡಿಕೆಗೆ ಮನ್ನಣೆ ಸಿಕ್ಕಿರುವುದು ಸಂತಸ ತಂದಿದೆ ಎಂಬ ಮಾತುಗಳ ಸಾರ್ವಜನಿಕ ವಲಯದಲ್ಲಿ ಕೇಳಿಬಂದಿದೆ.
