ಬೆಂಗಳೂರು: 5, 8, 9, 11 ನೇ ತರಗತಿಗಳ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ ಬೋರ್ಡ್ ಪರೀಕ್ಷೆಗಳನ್ನು ನಡೆಸಲು ಅನುಮತಿ ನೀಡಿ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ.

ಈ ಹಿಂದೆ ಹೈಕೋರ್ಟ್ ಏಕಸದಸ್ಯ ಪೀಠ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಸುತ್ತೋಲೆ ರದ್ದು ಪಡಿಸಿತ್ತು. ಈ ಆದೇಶ ಪ್ರಶ್ನಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ ನ್ಯಾ.ಕೆ. ಸೋಮಶೇಖರ್ & ರಾಜೇಶ್ ರೈ ಕೆ ಅವರ ನೇತೃತ್ವದ ಪೀಠ ಆದೇಶ ನೀಡಿದೆ. ರಾಜ್ಯ ಸರ್ಕಾರದ ಸುತ್ತೋಲೆ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಸಂಘಟನೆ ಮೇಲ್ಮನವಿ ಸಲ್ಲಿಸಿದ್ದು, ರೂಪ್ಸಾ ಕಾನೂನು ಸಮರಕ್ಕೆ ಹಿನ್ನಡೆಯಾಗಿದೆ.
5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ಹೈಕೋರ್ಟ್ ಏಕಸದಸ್ಯ ಪೀಠ ರದ್ದುಪಡಿಸಿತ್ತು. ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪು ರದ್ದುಪಡಿಸಿರುವ ವಿಭಾಗೀಯ ಪೀಠ ರಾಜ್ಯ ಸರ್ಕಾರವು ಬೋರ್ಡ್ ಪರೀಕ್ಷೆಯನ್ನು ನಡೆಸಲು ಅವಕಾಶ ನೀಡಿದೆ. ಇನ್ಮುಂದೆ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ ಸರ್ಕಾರ ಬೋರ್ಡ್ ಪರೀಕ್ಷೆ ನಡೆಸಲಿದೆ.
ಹೈಕೋರ್ಟ್ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿದ್ದರಿಂದ ಪರೀಕ್ಷೆ ಪ್ರಕ್ರಿಯೆ ಸ್ಥಗಿತಗೊಂಡಿತ್ತು. ಇದೀಗ ಸ್ಥಗಿತಗೊಂಡ ಪ್ರಕ್ರಿಯೆ ಹಂತದಿಂದಲೇ ಮುಂದುವರಿಸಲು ಆದೇಶ ನೀಡಲಾಗಿದೆ. ಅಲ್ಲದೇ ಮುಂದಿನ ಶೈಕ್ಷಣಿಕ ವರ್ಷದಲ್ಲಿ ಬೋರ್ಡ್ ಪರೀಕ್ಷೆ ನಡೆಸಲು ಸಂಬಂಧಪಟ್ಟವರೊಂದಿಗೆ ಸಮಾಲೋಚಿಸಬೇಕು ಎಂದು ಸರ್ಕಾರಕ್ಕೆ ಹೈಕೋರ್ಟ್ ವಿಭಾಗೀಯ ಪೀಠ ಸೂಚಸಿದೆ.