ಬೆಂಗಳೂರು: ಮಾಜಿ ಶಾಸಕ ಮಲ್ಲಿಕಾರ್ಜುನ ಸಿದ್ದರಾಮಯ್ಯ ಖೂಬಾ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ ಎಂದು ರಾಜ್ಯ ಬಿಜೆಪಿಯ ಶಿಸ್ತು ಸಮಿತಿಯ ಅಧ್ಯಕ್ಷ ಲಿಂಗರಾಜ್ ಪಾಟೀಲ್ ತಿಳಿಸಿದ್ದಾರೆ.


ಬಸವಕಲ್ಯಾಣ ವಿಧಾನಸಭಾ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಮಾಜಿ ಶಾಸಕ ಮಲ್ಲಿಕಾರ್ಜುನ ಸಿದ್ದರಾಮಯ್ಯ ಖೂಬಾ ಅವರು ಬಿಜೆಪಿ ಅಭ್ಯರ್ಥಿಯ ವಿರುದ್ಧವೇ ಸ್ಪರ್ಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಲಾಗಿದೆ.
ಈ ಬಗ್ಗೆ ಆದೇಶ ಹೊರಡಿಸಿರುವ ಲಿಂಗರಾಜ್ ಪಾಟೀಲ್, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ಶರಣ ಸಲಗಾರ ಅವರ ವಿರುದ್ಧ ಬಂಡುಕೋರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಪಕ್ಷದ ಶಿಸ್ತನ್ನು ಉಲ್ಲಂಘಿಸಿದ್ದೀರಿ. ಕೊನೆ ಕ್ಷಣದವರೆಗೂ ನೀವು ಚುನಾವಣಾ ಕಣದಿಂದ ಹಿಂದೆ ಸರಿಯಲಿಲ್ಲ. ಈ ಕಾರಣಕ್ಕೆ ಪಕ್ಷ ವಿರೋಧಿ ಚಟುವಟಿಕೆಗಾಗಿ ನಿಮ್ಮನ್ನು ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.












