ಉಡುಪಿ: ಶಂಕಿತ ನ್ಯುಮೋನಿಯಾದಿಂದಾಗಿ ಕಳೆದ ಶುಕ್ರವಾರದಿಂದ ಮಣಿಪಾಲ್‌ನ ಕಸ್ತೂರಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೆಜಾವರ ಮಠಾಧೀಶ ವಿಶ್ವೇಶ ತೀರ್ಥ ಸ್ವಾಮೀಜಿಯವರ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಶ್ರೀಗಳಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆದರೆ ಅವರ ಉಸಿರಾಟದಲ್ಲಿ ಯಾವುದೇ ಚೇತರಿಕೆ ಕಾಣುತ್ತಿಲ್ಲ ಎನ್ನಲಾಗಿದೆ. ಆದಕಾರಣ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆ ಅಳವಡಿಸಿ ದೆಹಲಿಯ ಏಮ್ಸ್ ವೈದ್ಯರ ಸಲಹೆಯಂತೆ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳವರಿಗೆ ಪ್ರಜ್ಞಾ ಸ್ಥಿತಿಯಲ್ಲಿ ಚೇತರಿಕೆ ಕಂಡುಬಂದಿಲ್ಲ, ಜೀವರಕ್ಷಕ ಸಾಧನಗಳ ಸಹಾಯದಲ್ಲಿದ್ದು, ದೇಹಸ್ಥಿತಿ ಕ್ಷೀಣಿಸುತ್ತಿದೆ’ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೀಗಳನ್ನು ಭೇಟಿ ಮಾಡಲು ಗಣ್ಯರು ಆಗಮಿಸುತ್ತಿದ್ದಾರೆ. ಆದರೆ ಶನಿವಾರದಿಂದ ಶ್ರೀಗಳ ಭೇಟಿಗೆ ಅವಕಾಶ ನಿರಾಕರಿಸಲಾಗುವುದು ಎಂದು ಆಸ್ಪತ್ರೆ ಮೂಲಗಳಿಂದ ತಿಳಿದುಬಂದಿದೆ. ಇನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪೇಜಾವರ ಶ್ರೀಗಳ ಆರೋಗ್ಯದ ಕುರಿತು ಕ್ಷಣಕ್ಷಣದ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಕೆಎಂಸಿ ಆಸ್ಪತ್ರೆಗೆ ಉಡುಪಿಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ಭೇಟಿ ನೀಡಿ ಶ್ರೀಗಳ ಆರೋಗ್ಯದ ಕುರಿತು ಮಾಹಿತಿ ಪಡೆದಿದ್ದಾರೆ. ಅಲ್ಲದೆ ರಾತ್ರಿ ಪೇಜಾವರ ಶ್ರೀಗಳಿಗೆ ಎಂಆರ್ ಐ ಸ್ಕ್ಯಾನಿಂಗ್ ಮಾಡಲಾಗಿದ್ದು, ಅದರ ವರದಿ ಬಂದ ಬಳಿಕ ಶ್ರೀಗಳ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.

