ಬಂಟ್ವಾಳ: ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ರಾಷ್ಟ್ರೀಯ ಸದ್ಭಾವನಾ ದಿನವನ್ನು ಆಚರಿಸಲಾಯಿತು.


ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಸೌಮ್ಯ ಹೆಚ್.ಕೆ. ಮಾತನಾಡಿ, ದೇಶ ಕಂಡ ಅತ್ಯಂತ ಕಿರಿಯ ವಯಸ್ಸಿನ ದಕ್ಷ ಪ್ರಧಾನಿಯಾಗಿದ್ದ ರಾಜೀವ ಗಾಂಧಿಯವರ ಹುಟ್ಟುಹಬ್ಬದ ಪ್ರಯುಕ್ತ ದೇಶಾದ್ಯಂತ ಈ ದಿನ ಸದ್ಭಾವನಾ ದಿನವನ್ನು ಆಚರಿಸಲಾಗುತ್ತಿದೆ. ಅವರ ಆದರ್ಶಗಳನ್ನು ನಾವು ಇಂದು ಪಾಲಿಸೋಣ. ಭಾರತಾಂಬೆಯ ಮಕ್ಕಳಾದ ನಾವೆಲ್ಲರೂ ಜಾತಿ, ಧರ್ಮ, ಮತ, ಪಂಥ, ಭಾಷೆ ಹಾಗೂ ಪ್ರಾಂತೀಯ ಭೇದ ಭಾವಗಳನ್ನು ಮರೆತು ಒಬ್ಬರನ್ನೊಬ್ಬರು ಗೌರವಿಸಬೇಕು ಎಂದರು.
ರಾಷ್ಟ್ರೀಯ ಸೇವಾ ಯೋಜನಾ ಘಟಕದ ಯೋಜನಾಧಿಕಾರಿ ದೇವಿಪ್ರಸಾದ್, ವಿದ್ಯಾರ್ಥಿಗಳಿಗೆ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರಾದ ನಸೀಮಾ ಬೇಗಂ ಎಸ್., ಡಾ.ಶ್ರೀನಿವಾಸ, ಹನುಮಂತಯ್ಯ ಜಿ.ಹೆಚ್., ವಿನಯ್ ಎಂ.ಎಸ್. ಉಪಸ್ಥಿತರಿದ್ದರು. ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.












