ಬೆಂಗಳೂರು: ಕರ್ನಾಟಕದಲ್ಲಿ ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮೊದಲ ಬಾರಿಗೆ 2020-21ನೇ ಸಾಲಿನ ಬಜೆಟ್ ಮಂಡನೆಯಾಗಲಿದೆ. ಬಿಜೆಪಿ ಜೆಡಿಎಸ್ ಮೈತ್ರಿ ಸರ್ಕಾರದ ಅವಧಿಯಲ್ಲಿ ಆರು ಬಾರಿ ಬಜೆಟ್ ಮಂಡಿಸಿದ್ದ ಬಿ.ಎಸ್.ಯಡಿಯೂರಪ್ಪ ಇದೀಗ ಏಳನೇ ಬಾರಿಗೆ ಗುರುವಾರ ಬಜೆಟ್ ಮಂಡನೆ ಮಾಡಲಿದ್ದಾರೆ. ದೇಶದಲ್ಲೇ ಮೊದಲ ಬಾರಿಗೆ ಕೃಷಿ ವಲಯಕ್ಕೆ ಪ್ರತ್ಯೇಕ ಬಜೆಟ್ ಮಂಡಿಸಿದ್ದ ಬಿಎಸ್ ವೈ ಮೇಲೆ ರೈತಾಪಿ ವಲಯ ಭರಪೂರ ನಿರೀಕ್ಷೆಗಳನ್ನು ಇಟ್ಟುಕೊಂಡಿದೆ. ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಸಭೆಯಲ್ಲಿ ಸಿಎಂ ಯಡಿಯೂರಪ್ಪ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.
2020-21ನೇ ಸಾಲಿನ ಬಜೆಟ್ ನಲ್ಲಿ ಮೂಲಭೂತ ಸೌಕರ್ಯ, ಕೃಷಿ, ನೀರಾವರಿ, ಪ್ರವಾಹ ಪೀಡಿತ ಪ್ರದೇಶದ ಜನರ ನಿರೀಕ್ಷೆಗಳು, ಮಹಿಳೆ ಮತ್ತು ಮಕ್ಕಳ ಕಲ್ಯಾಣ ಹೀಗೆ ಸಾಲು ಸಾಲು ಸವಾಲುಗಳು ಬಿ.ಎಸ್.ವೈ ಸರ್ಕಾರದ ಮುಂದಿದೆ.














