ಬೆಂಗಳೂರು: ಯುವನಿಧಿ ಯೋಜನೆಯ ಫಲಾನುಭವಿಗಳಾಗಲು ಪ್ರತಿ ತಿಂಗಳು ತಾನು ನಿರುದ್ಯೋಗಿ, ವ್ಯಾಸಂಗ ಮುಂದುವರಿಸುತ್ತಿಲ್ಲ ಹಾಗೂ ಸ್ವಯಂ ಉದ್ಯೋಗಿಯಲ್ಲ ಎಂದು ಸ್ವಯಂ ಘೋಷಣೆ ಮಾಡಿಕೊಳ್ಳುವುದನ್ನು ಕಡ್ಡಾಯಗೊಳಿಸಲಾಗಿದೆ.


ಕೈಗಾರಿಕಾ ತರಬೇತಿ ಮತ್ತು ಉದ್ಯೋಗದ ಆಯುಕ್ತರು ಈ ಬಗ್ಗೆ ಪತ್ರಿಕಾ ಪ್ರಕಟನೆ ಬಿಡುಗಡೆ ಮಾಡಿದ್ದು, ಪ್ರಸಕ್ತ ತಿಂಗಳ ನಿರುದ್ಯೋಗ ಸ್ಥಿತಿ ಗತಿ ಬಗ್ಗೆ ಫೆ.29ರ ವರೆಗೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಸ್ವಯಂ ಘೋಷಣೆ ಪ್ರಮಾಣ ಪತ್ರವನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಯೋಜನ ಪಡೆಯುತ್ತಿರುವವರು ಪ್ರತಿ ತಿಂಗಳು ಸ್ವಯಂ ಘೋಷಣೆ ಮಾಡದಿದ್ದಲ್ಲಿ ಅಂತಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುವುದಿಲ್ಲ ಎಂದು ತಿಳಿಸಲಾಗಿದೆ.
ಈಗಾಗಲೇ ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ 2024ರ ಜನವರಿಯಲ್ಲಿ ನೇರ ನಗದು ವರ್ಗಾವಣೆ ಮಾಡಲಾಗಿದ್ದು, ಮುಂದಿನ ತಿಂಗಳು ಪ್ರಯೋಜನ ಪಡೆದು ಕೊಳ್ಳಲು ಸ್ವಯಂ ಘೋಷಣೆ ಮಾಡಬೇಕಾಗಿದ್ದು, ಅಭ್ಯರ್ಥಿಗಳಿಗೆ ಎಸ್‌ಎಂಎಸ್ ಸಂದೇಶವನ್ನು ರವಾನಿಸಲಾಗಿದೆ. ಅಭ್ಯರ್ಥಿಗಳು ಸ್ವಯಂ ಘೋಷಣೆ ಮಾಡಿಕೊಳ್ಳಲು https://sevasindhugs.karnataka.gov.in ಜಾಲ ತಾಣವನ್ನು ವೀಕ್ಷಿಸಬಹುದಾಗಿದೆ ಎಂದು ಆಯುಕ್ತರು ತಿಳಿಸಿದ್ದಾರೆ.